ಕಲಬುರಗಿ ಬಳಿ ಸಾವಿರ ಎಕರೆ ಪ್ರದೇಶದಲ್ಲಿ ಮೆಗಾ ಜವಳಿ ಪಾರ್ಕ್ ಒಂದು ಲಕ್ಷ ಜನರಿಗೆ ನೇರ ಉದ್ಯೋಗ: ಸಚಿವ ಪ್ರಿಯಾಂಕ್‌ ಖರ್ಗೆ

Mega textile park in thousand acre area near Kalaburagi will provide direct employment to one lakh people: Minister Priyank Kharge

ಕಲಬುರಗಿ ಬಳಿ ಸಾವಿರ ಎಕರೆ ಪ್ರದೇಶದಲ್ಲಿ ಮೆಗಾ ಜವಳಿ ಪಾರ್ಕ್ ಒಂದು ಲಕ್ಷ ಜನರಿಗೆ ನೇರ ಉದ್ಯೋಗ: ಸಚಿವ ಪ್ರಿಯಾಂಕ್‌ ಖರ್ಗೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಕಲಬುರಗಿ : ಕಲಬುರಗಿ ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್‌ನ್ನು ಸ್ಥಾಪಿಸಲಾಗುತ್ತಿದ್ದು ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. 

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನ ವಿಕಾಸೌಧದ ಕಚೇರಿಯಲ್ಲಿ ಸಚಿವರು ನಡೆಸಿದ ಸಭೆಯಲ್ಲಿ ಜವಳಿ ಪಾರ್ಕ್‌ ಸಜ್ಜುಗೊಳಿಸಲು ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸುವ ಸಂಬಂಧದಲ್ಲಿ ಚರ್ಚಿಸಲಾಯಿತು. "ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ" ಎಂದು ಸಚಿವರು ಹೇಳಿದ್ದಾರೆ.

ಪಾರ್ಕ್‌ ಅವಶ್ಯಕತೆಗಳಿಗನುಗುಣವಾಗಿ ಸುಮಾರು 16 ಎಂ.ಎಲ್.ಡಿ ನೀರಿನ ಅವಶ್ಯಕತೆಯಿದ್ದು, ಮದ್ರಿ ಗ್ರಾಮದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಬ್ಯಾರೇಜ್‌ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ ಪ್ರಿಯಾಂಕ್‌ ಖರ್ಗೆ ಅವರು ಪಾರ್ಕ್‌ ಆವರಣದಲ್ಲಿನ ಕೆರೆಯನ್ನು ಪುನರ್ಜೀವಗೊಳಿಸುವುದು, ಮಳೆನೀರು ಕೊಯಲು ಪದ್ಧತಿ ಅಳವಡಿಕೆ ಮೂಲಕ ನೀರನ್ನು ಬಳಸಿಕೊಳ್ಳುವ ಪರ್ಯಾಯ ವ್ಯವಸ್ಥೆಗಳನ್ನೂ ಮಾಡಲು ಸೂಚಿಸಿದರು. 

ಜವಳಿ ಪಾರ್ಕ್‌ ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿದ ಸಚಿವರು ದೀರ್ಘಕಾಲ ಬಾಳಿಕೆ ಬರುವ ರಸ್ತೆಗಳನ್ನು ನಿರ್ಮಿಸಲು ಸೂಚಿಸಿದರು. 

ಜವಳಿ ಪಾರ್ಕ್‌ ಆವರಣದಲ್ಲಿ ಸೋಲಾರ್‌ ದೀಪಗಳನ್ನು ಅಳವಡಿಸುವ ಮೂಲಕ ವಿದ್ಯುತ್‌ ಮಿತವ್ಯಯ ಮಾಡಲು ಸಲಹೆ ಮಾಡಿದ ಸಚಿವರು ಉಳಿದಂತೆ ಜವಳಿ ಪಾರ್ಕ್‌ಗೆ 180 ಮೆಗಾ ವ್ಯಾಟ್ ವಿದ್ಯುತ್ ಸಂಪರ್ಕ ಪೂರೈಸುವ ಸಂಬಂಧ 220 ಕೆ.ವಿ ಪವರ್‌ ಸಬ್‌ಸ್ಟೇಷನ್ ನಿರ್ಮಿಸಲು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಮನವಿಯಂತೆ ಪಾರ್ಕ್‌ ಆವರಣದಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು. 

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ (ಜವಳಿ) ವಿಪುಲ್ ಬನ್ಸಾಲ್‌, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ‌ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ, ಜವಳಿ ಅಭಿವೃದ್ಧಿ ಆಯುಕ್ತೆ ಕೆ.ಜ್ಯೋತಿ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.