ಅರಣ್ಯಗಳ ಒತ್ತುವರಿಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿಗಳು
The Chief Minister instructed the Forest Officers to take necessary measures to prevent the encroachment of forests
ಬೆಂಗಳೂರು : ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಅರಣ್ಯ ಇಲಾಖೆಯ ಮುಂಚೂಣಿ ಅಧಿಕಾರಿ ಸಿಬ್ಬಂದಿಗಳಿಗೆ 2022 ಮತ್ತು 2023 ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಅರ್ಹ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿರು. ಇದು ಅತ್ಯಂತ ನಿಷ್ಠುರವಾಗಿದ್ದು, ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ. ಅದ್ದರಿಂದ ಈ ಎಲ್ಲಾ ಕ್ರಮಗಳನ್ನು ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲಿಸಿ ಕಾಡುಪ್ರಾಣಿಗಳ ರಕ್ಷಣೆ ಮಾಡಲು ಅಗತ್ಯ ಕ್ರಮಗಳನ್ನು ಅನುಸರಿಸುವುದರೊಂದಿಗೆ ಸಾರ್ವಜನಿಕರ ಪ್ರಾಣಗಳನ್ನು ಕಾಪಾಡುವುದರ ಜೊತೆ ಜೊತೆಯಲ್ಲಿ ಅವರ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಮಹಾತ್ಮಗಾಂಧಿಯವರು ಸ್ವತಃ ಪ್ರಕೃತಿ ಪ್ರಿಯರಾಗಿದ್ದರು. ಅವರು "ಪ್ರಕೃತಿ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆ. ಆದರೆ ಮನುಷ್ಯನ ದುರಾಸೆಗಳನ್ನು ಪೂರೈಸಲು ಆಗುವುದಿಲ್ಲ" ಎಂದು ಹೇಳಿದ್ದರು. ಇವತ್ತಿನ ಪರಿಸರದ ಅನಾಹುತಗಳಿಗೆ ಮನುಷ್ಯನ ದುರಾಸೆಯೇ ಕಾರಣ. ಎಂದು ಮನುಷ್ಯ ತನ್ನ ದುರಾಸೆಗಳಿಂದ ಮುಕ್ತನಾಗುವನೋ ಅಂದು ಉತ್ತಮ ಪರಿಸರ ನಿರ್ಮಾಣ ಅಗುವುದು. ಕಾಡು ಪ್ರಾಣಿಗಳ, ಪಶು ಪಕ್ಷಿಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ನಾವೆಲ್ಲರೂ ಪರಿಸರದ ರಕ್ಷಣೆ ಮಾಡಬೇಕು. ಅರಣ್ಯ ನಾಶವನ್ನು ತಡೆಯಬೇಕು ಎಂದು ತಿಳಿಸಿದರು.
ಇಂದು ಪ್ರಶಸ್ತಿ ಸ್ವೀಕರಿಸಿದವರು ಉಳಿದವರಿಗೆ, ಸಮಾಜಕ್ಕೆ ಸ್ಪೂರ್ತಿಯಾಗಲಿ ಎಂದು ಹಾರೈಸಿ, ಆಯಾ ವರ್ಷದ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ ಎಂದು ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳು ತಿಳಿಸಿದರು.
ವನ್ಯಜೀವಿ ಮತ್ತು ಅರಣ್ಯ ಸಂಪತ್ತು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರದ್ದು. ಆಫ್ರಿಕಾ ಬಿಟ್ಟರೆ ಅತಿ ಹೆಚ್ಚು ಅರಣ್ಯ ಪ್ರಾಣಿ ಸಂಪತ್ತು ಇರುವುದು ಭಾರತದಲ್ಲೇ. ಹಾಗೆಯೇ ಅರಣ್ಯದ ಪ್ರಮಾಣ ಇನ್ನೂ ಹೆಚ್ಚಾಗಬೇಕಿದೆ. ಅರಣ್ಯ ಸಂಪತ್ತು ಕಾಪಾಡುವ ವಿಚಾರದಲ್ಲಿ ಅರಣ್ಯ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಜವಾಬ್ದಾರಿ ಹೆಚ್ಚಾಗಿದೆ ಎಂದರು.
ಆಯಾ ವರ್ಷದ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಿದರೆ, ಅಧಿಕಾರಿ ಸಿಬ್ಬಂದಿಗಳಿಗೆ ಪ್ರೋತ್ಸಾಹ ದೊರೆಯುವುದರೊಂದಿಗೆ ಹೆಚ್ಚಿನ ರೀತಿಯಲ್ಲಿ ತಮ್ಮ ಜವಾಬ್ದಾರಿಗಳನ್ನು ಅರಿತು ಕೆಲಸ ನಿರ್ವಹಿಸುತ್ತಾರೆ. ಅದ್ದರಿಂದ ಇನ್ನು ಮುಂದೆ ಪ್ರತಿ ವರ್ಷ ಮುಂಚೂಣಿ ಅಧಿಕಾರಿ ಸಿಬ್ಬಂದಿಗಳಿಗೆ ಅವರ ಸೇವೆಯನ್ನು ಅರಿತು ಪದಕ ಪ್ರದಾನ ಮಾಡಬೇಕು ಎಂದು ತಿಳಿಸಿದರು.
ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅರಣ್ಯಪಡೆ ಮುಖ್ಯಸ್ಥರಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.