ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕ್ಷೇತ್ರಗಳ ಅಭಿವೃದ್ಧಿಗೆ ಯಾವುದೇ ಕೊರತೆಯಾಗಿಲ್ಲ: ಸಿದ್ದರಾಮಯ್ಯ
There is no lack of development of sectors due to the implementation of guarantee schemes: Siddaramaiah
ಬೆಳಗಾವಿ: ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯದಲ್ಲಿಯೇ ಸೂಕ್ತ ಅನುದಾನವನ್ನು ಕಲ್ಪಿಸಿರುತ್ತದೆ.
ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಎಲ್ಲಾ ಕ್ಷೇತ್ರಗಳಿಗೂ ಅಗತ್ಯ ಅನುದಾನವನ್ನು ಆಯವ್ಯಯದಲ್ಲಿ ಒದಗಿಸಿರುತ್ತದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕ್ಷೇತ್ರಗಳ ಅಭಿವೃದ್ಧಿಗೆ ಯಾವುದೇ ಕೊರತೆಯಾಗಿರುವುದಿಲ್ಲ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಸದಸ್ಯರಾದ ಸಿ.ಟಿ.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿಗಳು, ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸಲು ಸರ್ಕಾರವು ಯಾವುದೇ ನಿರ್ಧಾರ ತೆಗೆದುಕೊಂಡಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ಅಸ್ತಿತ್ವಕ್ಕೆ ಬಂದಾಗಿನಿಂದ 2024ರ ನವೆಂಬರ್ ಅಂತ್ಯದವರೆಗೆ ಗೃಹಲಕ್ಷ್ಮಿ ಯೋಜನೆಗೆ 32,817 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 8,931 ಕೋಟಿ ರೂ., ಗೃಹಜ್ಯೋತಿಗೆ 14,869 ಕೋಟಿ ರೂ., ಶಕ್ತಿ ಯೋಜನೆಗೆ 6,543 ಕೋಟಿ ರೂ., ಯುವನಿಧಿ ಯೋಜನೆಗೆ 221.3 ಕೋಟಿ ರೂ. ವೆಚ್ಚವಾಗಿದೆ.
ಜಿಲ್ಲಾಮಟ್ಟದಲ್ಲಿ 30 ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಿ ಆದೇಶಿಸಲಾಗಿದೆ.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಅವರ ಆಪ್ತ ಸಿಬ್ಬಂದಿ ಮತ್ತು ಪ್ರಾಧಿಕಾರದ ಸದಸ್ಯರುಗಳ ವೇತನ ಹಾಗೂ ಇತರೆ ಸವಲತ್ತುಗಳನ್ನು ನಿಗದಿಪಡಿಸಲಾಗಿದೆ.
ಅದೇ ರೀತಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಗೌರವಧನ ಸಭಾ ಭತ್ಯೆ ನಿಗದಿಪಡಿಸಿ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಲಿಖಿತ ಉತ್ತರ ನೀಡಿದ್ದಾರೆ.